ಮಂಗಳೂರು: ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಜೂರಾಗಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಕಳ-ಮೂಡುಬಿದಿರೆ-ಮಂಗಳೂರು ರಸ್ತೆ, ಬಿ.ಸಿ.ರೋಡ್- ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವೇಗಪಡಿಸಬೇಕು. ಅದೇ ರೀತಿ ಕೋವಿಡ್‍ನಿಂದಾಗಿ ನಿಂತಿರುವ ಇತರೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು ಎಂದು ಸಂಸದರು ತಿಳಿಸಿದರು.
ಉಳ್ಳಾಲ ನೇತ್ರಾವತಿ ಸೇತುವೆ ಜಪ್ಪಿನಮೊಗರುವಿನಿಂದ ಕಣ್ಣೂರು ಮಸೀದಿಯವರೆಗಿನ ಬೈಪಾಸ್ ನಿರ್ಮಾಣಕ್ಕೆ ಭೂ ಸ್ವಾಧೀನ ಸಮಸ್ಯೆ ಇರುವುದರಿಂದ ಆ ಯೋಜನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕಿತರ ಬಿಲ್ ಪರಿಶೀಲನೆ:
ಕೊರೊನಾ ಸೋಂಕಿತರ ಆಸ್ಪತ್ರೆಯ ಬಿಲ್ಗಳು ಸರ್ಕಾರ ನಿಗದಿಪಡಿಸಿದ ದರದಲ್ಲಿ ಇದೆಯೇ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಸಭೆಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿ ದಿನ 4,000 ಮಂದಿಯ ಗಂಟಲು ದ್ರವದ ಮಾದರಿಯ ತಪಾಸಣೆ ಮಾಡಲು ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ. ಮಂಗಳೂರು ನಗರಕ್ಕೆ ಬರುವ ಬದಲು ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಪತ್ತೆಹಚ್ಚಿ, ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕಳುಹಿಸಿ ಆಯುಷ್ಮಾನ್ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆರ್. ಸೆಲ್ವಮಣಿ, ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೇರಿದಂತೆ ಇತರರು ಉಪಸ್ಥಿತರಿದ್ದರು.