ಮಂಗಳೂರು : ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಿರುವ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮಂಗಳೂರಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ 1.22 ಎಕರೆ ಜಾಗ ಮೀಸಲಿಡಲಾಗಿತ್ತು.
ಈ ಕೋಟ್ಯಂತರ ರೂ. ಮೌಲ್ಯದ ಜಾಗದಲ್ಲಿ ಪ್ರಭಾವಿ ಬಿಲ್ಡರ್ ಶರತ್ ರಾಜ್ ಎಂಬಾತ ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದನು. ಈ ಬಗ್ಗೆ ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಇಂದು ಮಧ್ಯಾಹ್ನ ದಾಳಿ ನಡೆಸಿ, ಅನಧಿಕೃತ ಮನೆ ಕೆಡವಿ ಹಾಕಿದ್ದಾರೆ.
ಇದೀಗ ಬಿಲ್ಡರ್ ಶರತ್ ರಾಜ್ ಮೇಲೆ ಪ್ರಕರಣ ದಾಖಲಾಗಿದೆ. ಈ ಹಗರಣದಲ್ಲಿ ಉಳ್ಳಾಲ ನಗರಸಭೆ, ಕೋಟೆಕಾರು ಪಪಂ ಮತ್ತು ಕಂದಾಯ ಇಲಾಖೆಯ ಅಧಿಕಾರಿ ವರ್ಗ ಲಂಚ ಪಡೆದು ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.