ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಶುಕ್ರವಾರ ಸೌರಮಾನ ಯುಗಾದಿ ಆಚರಣೆಯನ್ನು ವಿಶೇಷ ಪೂಜೆ, ಉತ್ಸವದೊಂದಿಗೆ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ವಿಷುಕಣಿ ಉತ್ಸವವು ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ನೆರವೇರಿತು.
ಸಹಸ್ತ್ರಾರು ಮಂದಿ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಷುಕಣಿ ದರ್ಶನ ಪಡೆದರು. ಬೆಳಿಗ್ಗೆ ದೇವರ ಉತ್ಸವ ಬಲಿ, ವಸಂತ ಕಟ್ಟೆಪೂಜೆ, ಮಧ್ಯಾಹ್ನ ವಿಶೇಷ ಮಹಾಪೂಜೆ ನಡೆಯಿತು. ವಿಷುಕಣಿ ಉತ್ಸವದ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ನೆರೆದಿದ್ದರು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ತ್ರಾರು ಮಂದಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದಾಸ ಗೌಡ ಎಸ್, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಬಿ.ಐತ್ತಪ್ಪ ನಾಯ್ಕ್, ಡಾ.ಸುಧಾ.ಎಸ್.ರಾವ್, ವೀಣಾ.ಬಿ.ಕೆ, ದೇವಳದ ಪ್ರಧಾನ ಅರ್ಚಕ ವಿ.ಎಸ್.ಭಟ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ.ಜಗನ್ನಿವಾಸ ರಾವ್, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಚಿದಾನಂದ ಬೈಲಾಡಿ, ನಯನಾ ರೈ, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತಿತರರು ಇದ್ದರು.
ಇದನ್ನೂ ಓದಿ: ನಾಳೆಯಿಂದ ಜೆಡಿಎಸ್ 'ಜನತಾ ಜಲಧಾರೆ' ಆರಂಭ: ಒಟ್ಟು 94 ಕಡೆ ಜಲಸಂಗ್ರಹ