ಮಂಗಳೂರು: ನಗರದ ಮೂಡುಬಿದಿರೆ ಯನೆಪೊಯೆ ಎಂಜಿನಿಯರಿಂಗ್ ಕಾಲೇಜಿನ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಘಟನೆ ವೇಳೆ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಐವರು ವಿದ್ಯಾರ್ಥಿಗಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ನಿನ್ನೆ ಕಾಲೇಜಿನಲ್ಲಿ ಸಾಂಪ್ರದಾಯಿಕ ವಸ್ತ್ರಧಾರಣೆಯ ವಿಚಾರದಲ್ಲಿ ಪೂರ್ವ ತಯಾರಿ ನಡೆದಿತ್ತು. ಇದೇ ವಸ್ತ್ರದ ವಿಚಾರದಲ್ಲಿ ಒಂದು ತಂಡದ ವಿದ್ಯಾರ್ಥಿಗಳು ಮತ್ತೊಂದು ತಂಡದ ವಿದ್ಯಾರ್ಥಿಗಳೊಂದಿಗೆ ಆಕ್ಷೇಪ ಎತ್ತಿದ್ದರು. ಈ ಸಂದರ್ಭದಲ್ಲಿ ಇತ್ತಂಡಗಳ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಈ ಬಗ್ಗೆ ಮಾಹಿತಿ ಪಡೆದ ಕಾಲೇಜು ಪ್ರಾಂಶುಪಾಲರು ಎಲ್ಲ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡು ಎರಡೂ ತಂಡದ ತಲಾ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.