ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಬಂದು ಮಧ್ಯಾಹ್ನದಿಂದ ಸಂಜೆಯವರೆಗೆ ಆತಂಕ ಸೃಷ್ಟಿಯಾಗಿತ್ತು.
ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾನೆ. ಕರೆಯನ್ನು ಗಂಭೀರವಾಗಿ ಸ್ವೀಕರಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ಸಿಬ್ಬಂದಿ, ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದ್ದಾರೆ. ಆದರೆ ಸಂಜೆಯ ವೇಳೆಗೆ ಅದು ಹುಸಿ ಕರೆ ಎಂಬುದು ದೃಢವಾಗಿದೆ.
ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಮಧ್ಯಾಹ್ನದ ವೇಳೆಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆ ಬಂದಿತ್ತು. ಶೋಧದ ಬಳಿಕ ಅದು ಹುಸಿಕರೆಯೆಂದು ದೃಢಪಟ್ಟಿದೆ. ಹುಸಿಕರೆ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.