ಮಂಗಳೂರು: ಕರಾವಳಿ ಹಾಗೂ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 27ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಳಿಗ್ಗೆ 8:30ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರವು ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಪಶ್ಚಿಮಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ತುಂತುರು ಮಳೆ ಸುರಿದಿದೆ.
ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ತಪ್ಪಲಿನ ಹೊಳೆಗಳು ತುಂಬಿ ಹರಿಯುತ್ತಿವೆ.
ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ದಿಡುಪೆ, ಪರ್ಲಾಣಿ, ಕೊಳಂಬೆ ಗ್ರಾಮಗಳಲ್ಲಿ ಮತ್ತೆ ನೆರೆ ಭೀತಿ ಎದುರಾಗಿದೆ. ಅಡಿಕೆ ತೋಟಗಳಿಗೆ ನೆರೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.