ಮೈಸೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇನ್ನಾದರೂ ನ್ಯಾಯ ಸಮ್ಮತ ಚುನಾವಣೆ ನಡೆಸಲಿ. ಮಸ್ಕಿ ಚುನಾವಣಾ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆ ಮೇಲೆ ಪ್ರಭಾವ ಬೀರುತ್ತೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದರು.
ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಸ್ಕಿಯ ಜನ ಹಣ ಬಲಕ್ಕೆ ಮನ್ನಣೆ ನೀಡದೆ ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವ್ರು ಒಳ್ಳೆಯ ರಾಜಕಾರಣ ಮಾಡಿ ಒಳ್ಳೆಯ ಹೆಸರು ಪಡೆಯಲಿ ಎಂದು ಕುಟುಕಿದರು.
ಹಣ ಹಂಚಿದ್ದ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರ ವಿರುದ್ಧ 5 ಎಫ್ಐಆರ್ ಗಳು ದಾಖಲಾಗಿದ್ದವು. ವಿಜಯೇಂದ್ರ ಅವ್ರು ತಂದೆಯ ಅಧಿಕಾರ ದುರ್ಬಳಕೆ ಮಾಡಿಕೊಂಡರು. ತುರುವಿಹಾಳ ಪರ ಅನುಕಂಪವೂ ಇತ್ತು. ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿತ್ತು. ಮಸ್ಕಿ ಫಲಿತಾಂಶ ಕಾಂಗ್ರೆಸ್‌ಗೆ ಮತ್ತಷ್ಟು ಬಲ ನೀಡಿದೆ ಎಂದು ಹೇಳಿದರು.
ಇದೇ ವೇಳೆ ಪಂಚ ರಾಜ್ಯಗಳ ಫಲಿತಾಂಶದ ಬಗ್ಗೆ ಮಾತನಾಡಿ, ಕಾಂಗ್ರೆಸ್ ಹಿನ್ನೆಡೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.