ಮೈಸೂರು: ನಾಡಹಬ್ಬ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಬಿಎಸ್ವೈ, ಅದ್ಧೂರಿಯಾಗಿ ಆಚರಿಸಬೇಕಿದ್ದ ಮೈಸೂರು ದಸರಾವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುತ್ತಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಸಹ ಮುಖ್ಯವಾಗಿದ್ದು, ಜನರು ವರ್ಚುವಲ್ ಮೂಲಕ ದಸರಾ ಕಾರ್ಯಕ್ರಮವನ್ನು ಮನೆಯಲ್ಲೇ ಕುಳಿತು ವೀಕ್ಷಿಸಬೇಕು. ಜೊತೆಗೆ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ, ಮೈಸೂರು ದಸರಾವನ್ನು ಸಾಂಸ್ಕೃತಿಕವಾಗಿ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತಿದೆ. ಜೊತೆಗೆ ವರ್ಚುವಲ್ ವ್ಯವಸ್ಥೆ ಮಾಡಿದ್ದು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಾಮುಂಡಿಬೆಟ್ಟ ಹಾಗೂ ಅರಮನೆ ವೇದಿಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಜನತೆಯ ಆರೋಗ್ಯವೂ ಮುಖ್ಯವಾಗಿದ್ದು, ಜನತೆ ಮನೆಯಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಬೇಕಾಗಿ ಕೋರುತ್ತೇನೆ ಎಂದು ತಿಳಿಸಿದರು.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ:

ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಂಗೀತ ಲೋಕದ ಸಾಧಕರಾದ ಪಂಡಿತ್ ಶ್ರೀ ವಿನಾಯಕ ತೊರವಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ್ ವಿನಾಯಕ ತೊರವಿ, ಸಾಹಿತ್ಯ, ಕಲೆ, ಸಂಸ್ಕೃತಿ ಉಳಿವಿಗೆ ಕರ್ನಾಟಕ ಶ್ರಮಿಸುವಷ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಅದೂ ಧಾರವಾಡದಲ್ಲಿ ಹುಟ್ಟಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ:
ಪ್ರಶಸ್ತಿ ಪ್ರದಾನದಲ್ಲಿ ನನಗೆ ಬಂದ 5 ಲಕ್ಷ ರೂನಲ್ಲಿ ಒಂದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಈ ನಿಟ್ಟಿನಲ್ಲಿ ಅಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ. ಇದಕ್ಕಾಗಿ ನಾನು 1 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇನೆ ಎಂದು ಪಂಡಿತ್ ಶ್ರೀ ವಿನಾಯಕ ತೊರವೀರ್ ತಿಳಿಸಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ ಇತರ ಗಣ್ಯರು ಉಪಸ್ಥಿತರಿದ್ದರು.