ಮೈಸೂರು: ದಸರಾ ಮುಖ್ಯಮಂತ್ರಿ ಕಪ್ ಕ್ರೀಡಾಕೂಟದಲ್ಲಿ ಮೈಸೂರು ವಿಭಾಗ 203 ಅಂಕದೊಂದಿಗೆ ಸಮಗ್ರ ಚಾಂಪಿಯನ್ ಷಿಪ್ ಪಟ್ಟವನ್ನು ಪಡೆಯಿತು. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಮೈಸೂರು ವಿಭಾಗದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರಿಗೆ ಪ್ರಶಸ್ತಿ ಮತ್ತು ಟ್ರೋಫಿಯನ್ನು ವಿತರಿಸಲಾಯಿತು.
ಇದಕ್ಕೂ ಮೊದಲು ಸಮಾರೋಪ ಸಮಾರಂಭವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು, ಬಳಿಕ ಮಾತನಾಡಿದ ಅವರು, ದಸರಾ ಮುಖ್ಯಮಂತ್ರಿ ಕ್ರೀಡಾಕೂಟವನ್ನು ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಇನ್ನಷ್ಟು ಹೊಸ ರೂಪ ನೀಡಿ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಸರ್ಕಾರದಿಂದ ಕ್ರೀಡಾಪಟುಗಳಿಗೆ ಬೆಂಬಲ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಫಿಟ್ ಇಂಡಿಯಾ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕಬಡ್ಡಿ ಆಟಗಾರ್ತಿ ಉಷಾರಾಣಿ, ಚೆಸ್ ಆಟಗಾರರಾದ ಗಿರೀಶ್ ಕೌಶಿಕ್ ಹಾಗೂ ಸ್ಟ್ಯಾನಿ ಅವರನ್ನು ಸನ್ಮಾನಿಸಲಾಯಿತು.