ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರ ತನಕ ಮೈಸೂರು ಮೃಗಾಲಯ ಮತ್ತು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ದಸರಾ ವೇಳೆ ಮೈಸೂರಿನ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ, ಜಿಲ್ಲಾಧಿಕಾರಿಗಳು ಮತ್ತು ದಸರಾ ವಿಶೇಷಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಸರಾ-2020 ರ ಪೂರ್ವಸಿದ್ಧತಾ ಸಭೆಯಲ್ಲಿ 16 ದಿನಗಳ ಕಾಲ ಮೃಗಾಲಯವನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೊರೊನಾ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸಗಳ ನಿಮಿತ್ತ ತೆರಳುವ ಅಧಿಕಾರಿಗಳನ್ನು ಹೊರತುಪಡಿಸಿ ಶ್ರೀಕಂಠೇಶ್ವರ ಸ್ವಾಮಿ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಈ ಸಂದರ್ಭದಲ್ಲಿ ದೇವಾಲಯದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳನ್ನು ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ದೇವಾಲಯದ ಒಳಭಾಗದಲ್ಲಿ ಎಂದಿನಂತೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.