ಮೈಸೂರು : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಉದ್ದಟತನವನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಇಂದು ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ ಅವರು, ಬಳಿಕ ಶ್ರೀ ಕಾರ್ಯ ಸಿದ್ಧಿ ಆಂಜನೇಯ ಸ್ವಾಮಿ ದೇವಾಲಯದ ಲೋಕಾರ್ಪಣಾ ಪೂಜಾ ಕೈಂಕರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಎಇಎಸ್ ಕಾರ್ಯಕರ್ತರು ಉದ್ಧಟತನ ತೋರಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆಯಾಗಿರಲಿ ಅಥವಾ ಮತ್ಯಾವ ಮಹನೀಯರ ಪ್ರತಿಮೆಯಾಗಿರಲಿ ಕೂಡಲೇ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಈ ವಿಚಾರವನ್ನು ವಿಧಾನ ಮಂಡಲದಲ್ಲಿಯೂ ಚರ್ಚೆ ಮಾಡುತ್ತೇವೆ ಎಂದು ಬೆಳಗಾವಿ ಘಟನೆಯನ್ನು ಖಂಡಿಸಿದರು.
ಇದನ್ನೂ ಓದಿ: ಬೆಳಗಾವಿ ಗಲಭೆ: 27 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ