ಮೈಸೂರು : ಈ ಬಾರಿ ಕೇಂದ್ರ ಬಜೆಟ್ ಬಗ್ಗೆ ರೈತರಿಗೆ ಹೆಚ್ಚಿನ ನಿರೀಕ್ಷೆ ಇಲ್ಲ. ಆದರೆ, ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಸೌಲಭ್ಯ ಕಲ್ಪಿಸುವ ನಿರೀಕ್ಷೆ ಇದೆ ಎಂದು ರಾಜ್ಯ ರೈತ ಸಂಘದ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
'ಈಟಿವಿ ಭಾರತ'ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಫೆಬ್ರವರಿ 1ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದೆ. ಕೇಂದ್ರ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇಲ್ಲ. ಆದರೆ, ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಏನಾದರೂ ರೈತರಿಗೆ ಹೊಸದನ್ನ ನೀಡಬಹುದು ಅಷ್ಟೇ ಎಂದರು.
ಭಾರತ ದೊಡ್ಡ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ಕಲ್ಯಾಣ ರಾಜ್ಯವಾಗಬೇಕಾದರೆ ಸಬ್ಸಿಡಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪಡಿತರ ವ್ಯವಸ್ಥೆ, ಆರೋಗ್ಯ, ಶಿಕ್ಷಣ ವ್ಯವಸ್ಥೆ ಅಸಮಾನತೆಯಿಂದ ಕೂಡಿದೆ. ಕೊಳ್ಳುವ ಶಕ್ತಿ ಕಡಿಮೆ ಇದೆ. ಬಡವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಬಡವರಿಗೆ ಖರೀದಿಸುವ ಶಕ್ತಿಯನ್ನು ಹೆಚ್ಚು ಮಾಡುವ ಬಜೆಟ್ ನೀಡಬೇಕು ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯನ್ನ ವಾಪಸ್ ಪಡೆದ ರೀತಿಯಲ್ಲಿ ರಾಜ್ಯ ಸರ್ಕಾರವೂ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಕೋವಿಡ್ ಸಂದರ್ಭದಲ್ಲಿ ರೈತರು ಶ್ರಮದಿಂದ ದುಡಿದಿದ್ದಾರೆ. ಹೆಚ್ಚಿನ ಮಳೆಯಾದ್ದರಿಂದ ಬೆಳೆ ನಾಶವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ರೈತರ ಸಾಲವನ್ನ ಮನ್ನಾ ಮಾಡಬೇಕು ಎಂದು ಕೋರಿದರು.
ಇದಲ್ಲದೇ, ಸಣ್ಣ ನೀರಾವರಿಗೆ ಹೆಚ್ಚಿನ ಒತ್ತು ನೀಡಬೇಕು. ಇತರೆ ಕೆಲಸಗಳಿಗೆ ನರೇಗಾ ಯೋಜನೆಯನ್ನ ಬಳಸಿಕೊಳ್ಳಬೇಕು. ಬಜೆಟ್ ಕೃಷಿಕರ ಪರವಾಗಿರಬೇಕು, ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಹೈಕಮಾಂಡ್ ಒಪ್ಪಿದ್ರೆ ಕಾಂಗ್ರೆಸ್ನ 16 ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆ: ರಮೇಶ್ ಜಾರಕಿಹೊಳಿ ಹೊಸ ಬಾಂಬ್!