ಮೈಸೂರು: ಜಿಲ್ಲೆಯಲ್ಲಿ ಸದ್ಯ ಶೇಕಡಾ 20ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳಿವೆ. ಈ ಪ್ರಮಾಣ ಶೇ. 5ಕ್ಕೆ ಇಳಿಯಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದರ ಸಚಿವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ಜೂನ್ 14 ರಿಂದ 21 ರವರೆಗೆ 1 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. 14ರ ನಂತರ ಯಾವ ಯಾವ ಕ್ಷೇತ್ರಕ್ಕೆ ಲಾಕ್‌ಡೌನ್ ರಿಯಾಯಿತಿ ನೀಡಬಹುದು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಒಂದೇ ವಾಹನದಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲೆಯ 11 ಕ್ಷೇತ್ರಗಳಿಗೆ ಹಾಗೂ ಎಲ್ಲಾ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಲಿದ್ದಾರೆ. ಹಾಗೂ ಕೋವಿಡ್ ಸಾವಿನ ಸಂಖ್ಯೆ ಲೆಕ್ಕದಲ್ಲಿ ಒಂದೆರಡು ವ್ಯತ್ಯಾಸಗಳಾಗಿದ್ದು, ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.