ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರಿಗೆ ಟೆಲಿಮೆಡಿಸಿನ್ ಮೂಲಕ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಯೋಗ ಮಾಡುವ ವೇಳೆ ಜಾರಿ ಬಿದ್ದು ಯೆನೆಪೊಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯದ ಕುರಿತು ಯೆನೆಪೊಯ ಆಸ್ಪತ್ರೆ ವೈದ್ಯರು, ಉಡುಪಿಯ ಡಾ. ರಾಜ, ಡಾ. ದಿವಾಕರ್ ಅವರು ನಿಗಾ ವಹಿಸಿದ್ದಾರೆ. ಫರ್ನಾಂಡಿಸ್ ಅವರಿಗೆ ಟೆಲಿಮೆಡಿಸಿನ್ ಮೂಲಕ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಲಾಗುವುದು. ನಾನು ಮೆಡಿಕಲ್ ಕಾಲೇಜಿನ ಅಧ್ಯಕ್ಷನಾಗಿರುವುದರಿಂದ ಟೆಲಿಮೆಡಿಸನ್ ಮೂಲಕ ಚಿಕಿತ್ಸೆ ಕೊಡಿಸಲು ಪ್ರಯತ್ನಿಸುತ್ತೇನೆ. ಜಗತ್ತಿನ ಯಾವ ಮೂಲೆಯಲ್ಲಿರುವ ತಜ್ಞರು, ವೈದ್ಯರ ಸಲಹೆ ಪಡೆದು ಚಿಕಿತ್ಸೆ ನೀಡಲು ಪ್ರಯತ್ನಿಸಲಾಗುವುದು ಎಂದರು.
ಇದನ್ನೂ ಓದಿ:ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ: ರಾಹುಲ್, ಸೋನಿಯಾ ಗಾಂಧಿ ದೂರವಾಣಿ ಕರೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪೇಜಾವರ ಸ್ವಾಮೀಜಿ ಸೇರಿದಂತೆ ಮೊದಲಾದವರು ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಣೆ ಮಾಡುತ್ತಿದ್ದಾರೆ. ಆಸ್ಕರ್ ಅವರು ನನ್ನ ತಂದೆಯ ಜೊತೆಗೆ ಕೆಲಸ ಮಾಡುತ್ತಿದ್ದರು. ನನ್ನ ಮೇಲೆ ಅವರಿಗೆ ವಿಶೇಷ ಪ್ರೀತಿ ಇತ್ತು. ನಾನು ಈ ಸ್ಥಾನಕ್ಕೇರಲು ಅವರು ಸಹ ಸಹಾಯ ಮಾಡಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಾಡಲು ಪ್ರಯತ್ನಿಸಲಾಗುವುದು. ದೇವರು ಅವರನ್ನು ಶೀಘ್ರ ಗುಣಮುಖ ಮಾಡಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಡಿ.ಕೆ.ಶಿವಕುಮಾರ್