ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷದವರು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ. ಬಡವರ ಪರವಾದ ಸಲಹೆಯನ್ನ ಸರ್ಕಾರ ಪರಿಗಣಿಸುತ್ತದೆ ಎಂದು ಮುಜರಾಯಿ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಈವರೆಗೂ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ವಿಪಕ್ಷದವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದರ ಬಗ್ಗೆ ಸರ್ಕಾರ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಿಂದ ಕೊರೊನಾ ಸೋಂಕಿತರು ಹೆಚ್ಚಾಗಿದ್ದಾರೆ. ಅಲ್ಲದೇ, ಇನ್ನೂ ಕೆಲವೆಡೆ ನಿರೀಕ್ಷೆಗೂ ಮೀರಿ ನೆಗೆಟಿವ್ ರಿಪೋರ್ಟ್ ಬಂದು ಮನೆಗೆ ಹೋಗಿದ್ದಾರೆ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಸಾಧಕ-ಬಾಧಕ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಪ್ರತಿನಿತ್ಯ 800 ಹೊರ ರೋಗಿಗಳು ಬರುತ್ತಾರೆ. ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ ವೇಳೆ ಸಣ್ಣಪುಟ್ಟ ಅವ್ಯವಸ್ಥೆ ಆಗಿರುವುದು ನಿಜ. ಕೂಡಲೇ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು.