ಮೈಸೂರು: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಮೈಸೂರು ಅರಮನೆಯ ಧ್ವನಿ ಮತ್ತು ಬೆಳಕು ಹಾಗೂ ವಿದ್ಯುತ್ ದೀಪಾಲಂಕಾರ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಏಪ್ರಿಲ್ 11, 13, 14, 18 , 25 ಮೇ 1 ಮತ್ತು 2ರಂದು ಸಂಜೆ 7ರಿಂದ 8ರವರೆಗೆ ವಿದ್ಯುತ್ ದೀಪಾಲಂಕಾರವನ್ನು ರದ್ದುಗೊಳಿಸಲಾಗಿದ್ದು, ಈ ದಿನಗಳಂದು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಏ. 10ರಿಂದ 30ರವರೆಗೆ ಅರಮನೆಯಲ್ಲಿ ನಡೆಯುತ್ತಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನೇ ದಿನೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರಿಗೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗುತ್ತಿದೆ ಎನ್ನಲಾಗಿದೆ.