ಮೈಸೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಯ ಸಾಲು ಸಾಲು ರಜೆಗಳಿಂದ ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು ವಾರ್ ರೂಂ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ರಜಾ ದಿನಗಳ ಕಾರಣದಿಂದ ನಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರು. ಇದರ ಪರಿಣಾಮ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಂಗಳವಾರ 48 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದೊಂದು ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಕೋವಿಡ್ ಪ್ರಕರಣಗಳಾಗಿವೆ.
ಡಿಸೆಂಬರ್ 4 ರಂದು 45 ಪ್ರಕರಣಗಳು ದಾಖಲಾಗಿದ್ದವು. ಇದಾದ ಬಳಿಕ ನಿನ್ನೆ 48 ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ವಾರ್ ರೂಂ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ, ಕೋವಿಡ್ ಕೇರ್ ಸೆಂಟರ್ ಪುನರಾರಂಭಿಸಲು ತಯಾರಿ ನಡೆಸಿದೆ. ಆಮ್ಲಜನಕ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು ಪ್ರಾಯೋಗಿಕ ಪರಿಶೀಲನೆ ಕೂಡ ನಡೆಸಲಾಗಿದೆ.
ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಪ್ರಕರಣಗಳು ಕಡಿಮೆ ಇದ್ದು, ಇದರ ಪ್ರಮಾಣ ಶೇ.0.5 ರಷ್ಟಿದೆ. ಆದರೆ ನೆರೆಯ ರಾಜ್ಯ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಕೆಲವು ಸಿದ್ಧತೆಗಳನ್ನು ಆರೋಗ್ಯ ಇಲಾಖೆ ಮಾಡಿಕೊಳ್ಳುತ್ತಿದೆ ಎಂದು ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ತಿಳಿಸಿದ್ದಾರೆ.
ಗಡಿ ಭಾಗಗಳಲ್ಲಿ ಕಟ್ಟೆಚ್ಚರ
ಕೇರಳದ ಗಡಿ ಪ್ರದೇಶವಾದ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವವರಿಗೆ 2 ಡೋಸ್ ಲಸಿಕೆ ಕಡ್ಡಾಯ ಹಾಗೂ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 16 ಆಮ್ಲಜನಕ ಘಟಕಗಳಿಗೆ ಮಂಜೂರಾಗಿದ್ದು, 12 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇದರ ಜೊತೆಗೆ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಒಂದೇ ದಿನ 24,719 ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ನಮಗೆ ಪ್ರತಿದಿನ 10 ಸಾವಿರ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಗುರಿ ಇದೆ ಎಂದು ಆರೋಗ್ಯ ಅಧಿಕಾರಿ ಡಾ.ಪ್ರಸಾದ್ ತಿಳಿಸಿದರು.
ಇದನ್ನೂ ಓದಿ: ಮೈಸೂರು : ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ ವ್ಯಾಘ್ರನ ಸೆರೆಗೆ ಕಾರ್ಯಾಚರಣೆ ಆರಂಭ