ಮೈಸೂರು : ಜಿಲ್ಲೆಯಲ್ಲಿ ಝಿಕಾ ವೈರಸ್ ಪ್ರಕರಣ ದೃಢಪಟ್ಟಿಲ್ಲ. ಒಂದು ವೇಳೆ ದೃಢಪಟ್ಟರೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ ಹೆಚ್ ಪ್ರಸಾದ್ ಸ್ಪಷ್ಟಪಡಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಝಿಕಾ ವೈರಸ್ ಕಂಡು ಬಂದಿದೆ ಎಂಬ ಮಾಹಿತಿ ಬಂದಿರುವುದರಿಂದ ಮೈಸೂರು-ಕೇರಳ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾರೆ. ನೆಗೆಟಿವ್ ವರದಿ ತೋರಿಸಿದರೆ ಮಾತ್ರ ಒಳಗೆ ಬಿಡಲಾಗುತ್ತಿದೆ. ಮೈಸೂರಿನಿಂದ ಕೇರಳಕ್ಕೆ ಹೋಗುವವರಿಗೆ ಆರೋಗ್ಯ ತಪಾಸಣೆ ಮಾಡಿ ಕಳುಹಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ 14 ಲಕ್ಷ ಲಸಿಕೆ ನೀಡಲಾಗಿದೆ. ಪೂರೈಕೆಯನ್ನು ನೋಡಿಕೊಂಡು ಲಸಿಕೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನ ಮುಂದೆ ಬರುತ್ತಿದ್ದಾರೆ ಎಂದರು.