ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಸಂಬಂಧ ಮೈಸೂರು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಡಿಸಿ ಆಗಿದ್ದ ರೋಹಿಣಿ ಸಿಂಧೂರಿ ಅವರು ಈ ಈಜುಕೊಳವನ್ನು ಕಟ್ಟಿಸಿದ್ದರು. ಬಳಿಕ ಈ ವಿಷಯ ಚರ್ಚೆಗೆ ಗ್ರಾಸವಾಗಿತ್ತು.
ವರದಿಯಲ್ಲಿರುವ ಅಂಶಗಳು
- ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ.ಗಳ ಅಂದಾಜು ಪಟ್ಟಿಯನ್ನು ತಯಾರಿಸಿದ್ದು, ಈ ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
- ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಇಲ್ಲ.
- ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.
- ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಸಹ ಇಲ್ಲ.
- ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.
- ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದರಿಂದ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ.
- ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಪಾರಂಪರಿಕ ಕಟ್ಟಡ ನವೀಕರಣ ಆರೋಪ; ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ