ಮೈಸೂರು: ಗರ್ಭಿಣಿಯರಿಗೆ ಸರಿಯಾದ ಆಹಾರ ಪದ್ಧತಿಯ ಬಗ್ಗೆ ಅರಿವು ಮೂಡಿಸುವ ಮೂಲಕ 2023 ರೊಳಗೆ ಮೈಸೂರನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಹಾಗೂ ಮಾತೃಶ್ರೀ ವಿದ್ಯಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ 'ಪೋಷಣ್ ಪಖ್ವಾಡ್’ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ 135 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, ಶೇ.12 ರಷ್ಟು ಮಕ್ಕಳು ಅಪೌಷ್ಟಿಕತೆ ಒಳಗಾಗಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳೇ ಹೆಚ್ಚಾಗಿ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರ್ನಾಥ್ ಮಾತನಾಡಿ, ಜನವರಿ ಹಾಗೂ ಫೆಬ್ರವರಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವ ಹಿನ್ನೆಲೆ ಕೊರೊನಾ ಲಸಿಕೆ ಉಚಿತವಾಗಿ ವಿತರಿಸಲಾಗುತ್ತಿದ್ದು, ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಸಾರ್ವಜನಿಕರು ಲಸಿಕೆ ಪಡೆದುಕೊಳ್ಳುವಂತೆ ಅವರು ಮನವಿ ಕೂಡಾ ಮಾಡಿದ್ದಾರೆ.