ಶಿವಮೊಗ್ಗ: ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ ಕೈಗೋಳ್ಳಬೇಕು ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಗೋ.ರಮೇಶ್ ಗೌಡ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮಕ್ಕೆ ತಿದ್ದುಪಡಿ ಮಾಡಿ 2018ರ ಜನವರಿ 4ರಂದು ರಾಜ್ಯಪಾಲರ ಅನುಮತಿ ಪಡೆದಿದೆ. ನಿಯಮಾನುಸಾರ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ದೊರೆಯುವ ಸೇವೆ ಹಾಗೂ ತಗಲುವ ಚಿಕಿತ್ಸಾ ವೆಚ್ಚಗಳ ಬಗ್ಗೆ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಸ್ವಾಗತಕಾರರ ಕೊಠಡಿಯ ಮುಂಭಾಗದಲ್ಲಿ ನಾಮಫಲಕ ಅಳವಡಿಸಬೇಕು. ಆದರೆ ಯಾವುದೇ ಖಾಸಗಿ ಆಸ್ಪತ್ರೆಗಳು ಈ ನಿಯಮ ಪಾಲನೆ ಮಾಡದೇ ನಿಯಮ ಉಲ್ಲಂಘನೆ ಮಾಡುತ್ತಿವೆ ಎಂದು ಆರೋಪಿಸಿದರು.
ಔಷಧಗಳ ಆಯ್ಕೆಯು ರೋಗಿ ಹಾಗೂ ರೋಗಿಯ ಸಂಬಂಧಿಕರಿಗೆ ಇರುತ್ತದೆ ಆದರೆ ಕೆಲವು ಆಸ್ಪತ್ರೆಗಳಲ್ಲಿ ಬೇರೆ ಕಡೆ ದೊರೆಯದೇ ಇರುವ ಹಾಗೂ ತಮ್ಮಲ್ಲಿ ಮಾತ್ರ ದೊರೆಯುವ ದುಬಾರಿ ವೆಚ್ಚದ ಔಷಧಗಳನ್ನ ಪಡೆದುಕೊಳ್ಳಬೇಕೆಂದು ಒತ್ತಾಯಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ. ಸರ್ಕಾರದ ನಿಯಮಗಳ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.