ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿದೆ.
ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
![ಭಜರಂಗದಳದ ಕಾರ್ಯಕರ್ತ ಹರ್ಷ](https://etvbharatimages.akamaized.net/etvbharat/prod-images/kn-smg-03-murder-ka10011_20022022232937_2002f_1645379977_1096.jpg)
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.
ಸೀಗೆಹಟ್ಟಿಯಲ್ಲಿ ಕಲ್ಲು ತೂರಾಟ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲೆಯಲ್ಲಿ ಬಿಗುವಿನ ವಾತಾವರಣವಿದೆ. ಸೀಗೆಹಟ್ಟಿ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಸೀಗೆಹಟ್ಟಿಯಲ್ಲಿ ಮನೆ ಮುಂದೆ ನಿಂತಿದ್ದ ಮೂರು ಬೈಕ್ ಹಾಗೂ ಒಂದು ಟಾಟಾ ಏಸ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣ ಅಗ್ನಿಶಾಮಕದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಶಾಲಾ-ಕಾಲೇಜುಗಳಿಗೆ ರಜೆ: ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿದೆ ಎಂದು ಡಿಡಿಪಿಐ ರಮೇಶ್ ತಿಳಿಸಿದ್ದಾರೆ.