ಶಿವಮೊಗ್ಗ : ಶಿವಮೊಗ್ಗ ನಗರದ ಎನ್‌ಡಿವಿ ವೀರಶೈವ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದರು.
ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರ ಪಕ್ಕದಲ್ಲಿರುವ ವಿದ್ಯಾರ್ಥಿ ನಿಲಯದ ಆವರಣದಲ್ಲಿ ನೂತನ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವೀರಶೈವ ಸಮಾಜದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿ, ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಅತ್ಯಂತ ಸಂತೋಷದಿಂದ ನೂತನ ಕಟ್ಟಡದ ಶಂಕು ಸ್ಥಾಪನೆ ಮಾಡಿದ್ದೇನೆ ಎಂದರು.
ನಾನು ಇಂದು ಬೆಳಗ್ಗೆ ಬೆಂಗಳೂರಿಗೆ ತೆರಳಬೇಕಿತ್ತು. ಆದರೆ, ಈ ಕಾರ್ಯಕ್ರಮವಿರುವ ಹಿನ್ನೆಲೆ ಇಲ್ಲಿಯೇ ಉಳಿದುಕೊಂಡೆ. ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ. ಬಿಡುಗಡೆ ಮಾಡುತ್ತೇನೆ. ತಕ್ಷಣ ಕಟ್ಟಡ ಕಾಮಗಾರಿ ಪ್ರಾರಂಭಿಸಿ ಎಂದು ವಿದ್ಯಾರ್ಥಿ ನಿಲಯದ ಸಮಿತಿಯವರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಗಳು, ಎನ್‌ಡಿವಿ ಹಾಸ್ಟೆಲ್ ಅಧ್ಯಕ್ಷ ಆಯನೂರು ಮಂಜುನಾಥ್, ಹಾಸ್ಟೆಲ್ ನಿರ್ಮಾಣ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ರಾಜಶೇಖರ್ ಸೇರಿ ಸಮಾಜದ ಅನೇಕ ಮುಖಂಡರು ಹಾಜರಿದ್ದರು.
ಕೋವಿಡ್ ಲಸಿಕೆ : ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವವರು ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳುತ್ತೇನೆ. ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇನ್ನು, ಮೂರ್ನಾಲ್ಕು ದಿನಗಳಲ್ಲಿ ಉಪ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಉಪ ಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಉಪ ಚುನಾವಣೆ ಬಗ್ಗೆ ರಾಜ್ಯಾಧ್ಯಕ್ಷರು ಸಭೆ ನಡೆಸಿ, ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ ಎಂದರು.