ಶಿವಮೊಗ್ಗ: ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ 'ಅಗ್ನಿಪಥ್' ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿರುವ ಯಥಾಸ್ಥಿತಿಯಲ್ಲಿ ಸೇನಾ ನೇಮಕಾತಿ ಯೋಜನೆಯಡಿಯೇ ಸೈನಿಕರ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ನಿಂದ ರೈಲು ತಡೆ ಚಳವಳಿ ಕೈಗೊಂಡಿತ್ತು. ಆದರೆ, ಪೊಲೀಸರು ಚಳವಳಿ ನಡೆಸಲು ಮುಂದಾದ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆ. ಭ್ರಷ್ಟ ಹಾಗೂ ಜನವಿರೋಧಿ ಕೇಂದ್ರದ ಬಿಜೆಪಿ ಸರ್ಕಾರ ತನ್ನ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಓದಿ: ಅಗ್ನಿಪಥ್ ವಿರೋಧಿಸಿ ಭಾರತ್ ಬಂದ್: ದೆಹಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್, ರೈಲುಗಳೂ ರದ್ದು
ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಟಿರುವುದು ಮುನ್ಸೂಚನೆ ನೀಡುತ್ತದೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ‘ಜೈ ಜವಾನ್, ಜೈ ಕಿಸಾನ್’ ಎಂಬ ಘೋಷಣೆಗೆ ಜನವಿರೋಧಿ ಬಿಜೆಪಿ ಸರ್ಕಾರ ‘ಅಗ್ನಿಪಥ್’ ಎಂಬ ಯೋಜನೆಯ ಮುಖಾಂತರ ಅಗ್ನಿಸ್ಪರ್ಶ ಮಾಡುತ್ತಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಗೋ ಬ್ಯಾಕ್ ಮೋದಿ ಘೋಷಣೆ ಕೂಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ನ ಮಾಜಿ ಸದಸ್ಯರಾದ ಆರ್. ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಜಿಲ್ಲಾಧ್ಯಕ್ಷ ಹೆಚ್.ಪಿ . ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.