ಶಿವಮೊಗ್ಗ: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.
ಪಾಲಿಕೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಎಲ್ಲಾ ಶಾಪಿಂಗ್ ಮಾಲ್, ಪಬ್, ಕ್ಲಬ್, ಜಿಮ್, ಈಜುಕೊಳಗಳು, ಚಲನಚಿತ್ರ ಮಂದಿರಗಳು, ಮಾಂಸ ಮಾರಾಟ ಮಳಿಗೆಳನ್ನು ಮುಚ್ಚಿಸಲು ಕ್ರಮ ವಹಿಸಲಾಗಿದೆ. ಮದುವೆ, ಜಾತ್ರೆ, ಸಂತೆ, ವಸ್ತು ಪ್ರದರ್ಶನ, ಸಂಗೀತ ಹಬ್ಬಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 104 ಜತೆಗೆ 080-66692000, 080-46848600ಕ್ಕೆ ಸಂಪರ್ಕಿಸಬಹುದಾಗಿದೆ.