ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿಯ ಆರು ಶಾಸಕರು, ಮೂರು ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದ್ರೇಶ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ತಡೆಗಟ್ಟುವುದನ್ನು ಬಿಟ್ಟು ಸಂಸದರು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ರಾಜಕಾರಣದಲ್ಲಿ ತೊಡಗಿದ್ದಾರೆ. ಅಧಿಕಾರಿಗಳ ವರ್ಗಾವಣೆ, ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಹೀಗೆ ಸ್ವಾರ್ಥ ರಾಜಕಾರಣ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಮೂಲಭೂತ ಸೌಲಭ್ಯಗಳು ಸಿಗದೇ ನರಕಯಾತನೆ ಅನುಭವಿಸುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿದೆ. ಸರಿಯಾದ ವೈದ್ಯಕೀಯ ಪರಿಕರಗಳಿಲ್ಲ, ಎಲ್ಲವು ಕಳಪೆ ಗುಣಮಟ್ಟದಾಗಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಪ್ರತಿದಿನ ಕರೆಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಯಾವ ರಾಜಕಾರಣಿಗಳೂ ಸಹ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ತಾಲ್ಲೂಕುಗಳಿಗೂ ಭೇಟಿ ನೀಡುತ್ತಿಲ್ಲ ಎಂದು ಆರೋಪಿಸಿದರು.