ಶಿವಮೊಗ್ಗ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಜಿಲ್ಲೆಯ ಭದ್ರಾವತಿ ತಾಲೂಕಿನ ಕೈಮರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಬಸವರಾಜ್ ನೇತೃತ್ವದಲ್ಲಿ ರಸ್ತೆತಡೆ ನಡೆಸಲಾಯಿತು.
ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಬೆಂಬಲ ಬೆಲೆ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಅದನ್ನು ಇನ್ನೂ ಜಾರಿ ಮಾಡಿಲ್ಲ. ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ದರ ಏರಿಕೆ ಸೇರಿದಂತೆ ಹಲವು ರೈತ ವಿರೋಧಿ ಧೋರಣೆ ಖಂಡಿಸಿ, ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆದರಿಸಲು ಕೇಂದ್ರ ಸರ್ಕಾರ ಸೈನಿಕರನ್ನು ಕಳುಹಿಸಿದೆ. ರೈತರು ಹಾಗೂ ಸೈನಿಕರು ದೇಶದ ಎರಡು ಕಣ್ಣುಗಳಿದ್ದಂತೆ. ಇದರಿಂದ ಕೇಂದ್ರ ಸರ್ಕಾರ ತಕ್ಷಣ ಸೈನಿಕರನ್ನು ವಾಪಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ಒಂದು ಗಂಟೆಗೂ ಅಧಿಕ ಕಾಲ ರಸ್ತೆತಡೆ ನಡೆಸಲಾದ ಪರಿಣಾಮ, ಚಿತ್ರದುರ್ಗ-ಶಿವಮೊಗ್ಗ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.