ಶಿವಮೊಗ್ಗ: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತಹಶೀಲ್ದಾರ್ ವಿ.ಎಸ್.ರಾಜೀವ್ ನಿನ್ನೆ ತೆರಳಿ ಪಿಂಚಣಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿ ಮನೆಗೆ ತೆರಳಿದ ತಹಶೀಲ್ದಾರ್, ಪತ್ರವನ್ನು ಹಸ್ತಾಂತರಿಸಿ ವೃದ್ಧೆಯ ಆರೋಗ್ಯ ವಿಚಾರಿಸಿದರು. ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿರುವುದಕ್ಕೆ ಸಂಬಂಧಿಸಿದಂತೆ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.
ಇದನ್ನೂ ಓದಿ: ಐದನೇ ದಿನವೂ ರಾಹುಲ್ ವಿಚಾರಣೆ.. ಇಂದು ಯಾವುದೇ ಸಮನ್ಸ್ ನೀಡದ ಇಡಿ