ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಹುಣಸೋಡು ಸ್ಫೋಟದಲ್ಲಿ 6 ಮಂದಿ ಮೃತಪಟ್ಟಿದ್ದು, ಈ ಪ್ರಕರಣದಲ್ಲಿ ಈಗ ನಾಲ್ವರನ್ನು ಬಂಧಿಸಲಾಗಿದೆ. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಸ್ಫೋಟಕ್ಕೆ ಕಾರಣ. ಈ ಹಿಂದೆ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದರೂ ಸಹ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಸ್ಫೋಟದಿಂದ ಪರಿಸರದ ಮೇಲೆ ತೀವ್ರ ಪರಿಣಾಮ ಬೀರಿದೆ. ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಇಷ್ಟಾದರೂ ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮೌನವಾಗಿದ್ದಾರೆ. ಅಧಿಕಾರಿಗಳ ವೈಫಲ್ಯಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಹಾಗಾಗಿ, ಸ್ಫೋಟಕ್ಕೆ ಇವರನ್ನೇ ಹೊಣೆಯನ್ನಾಗಿಸಬೇಕು ಎಂದು ನಾಗರಿಕ ಹಿತಾರಕ್ಷಣಾ ವೇದಿಕೆ ಅಧ್ಯಕ್ಷ ಕೆ.ವಿ. ವಸಂತ ಕುಮಾರ್ ಒತ್ತಾಯಿಸಿದ್ದಾರೆ.