ಶಿವಮೊಗ್ಗ: ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯವಾಗಿ ಬೆತ್ತಲಾಗಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ್ ಸದಸ್ಯರಿಗೆ ಹಾಗೂ ಸ್ಪರ್ಧಿಸಿದ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಖಾಯಂ ಅಧ್ಯಕ್ಷರೇ ಇಲ್ಲ. ಅವರಲ್ಲಿ ಇರುವವರು ತಾತ್ಕಾಲಿಕ ಅಧ್ಯಕ್ಷರು ಎಂದು ಲೇವಡಿ ಮಾಡಿದರು.
ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಹಿರಂಗವಾಗಿ ರಾಜಕೀಯ ಬೆತ್ತಲಾಗಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಕಾರ್ಯಕರ್ತರ ಶಕ್ತಿ ಹಾಗೂ ರಾಜ್ಯದ ಜನತೆ ಆಶೀರ್ವಾದದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ.. 'ನನ್ನ ತಂಟೆಗೆ ಬರಬೇಡಿ, ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ'
ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ್ ಸದಸ್ಯರುಗಳು ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಉತ್ತಮ ಕಾರ್ಯ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಬೇಕು. ಅದಕ್ಕೆ ಬೇಕಾದ ಸಹಕಾರ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತದೆ ಎಂದರು.