ಶಿವಮೊಗ್ಗ: ಬಿಜೆಪಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಸ್ವಯಂಬಲದ ಮೇಲೆ ಅಧಿಕಾರಕ್ಕೆ ಬರುತ್ತದೆ. ರಾಷ್ಟ್ರಮಟ್ಟದಲ್ಲಿ ಮೋದಿಯವರ ವರ್ಚಸ್ಸು, ಕಾರ್ಯಕರ್ತರ ಶ್ರಮ ಹಾಗೂ ಯಡಿಯೂರಪ್ಪ ನೇತೃತ್ವದ ಸರ್ಕಾರದ ಆಡಳಿತದ ಪರಿಣಾಮ 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಗೆ ಜೆಡಿಎಸ್ನ ಅನಿವಾರ್ಯತೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಇನ್ನು ನೀವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ದಾವಣಗೆರೆ ವಾಣಿಜ್ಯ ನಗರಿ. ಹಾಗಾಗಿ ಒಂದು ಅವಕಾಶ ನೀಡಿ ಎಂದು ಕೇಳಿರುವುದು ನಿಜ. ಹಾಗಾಗಿ ವರಿಷ್ಠರು ಮತ್ತು ಮುಖ್ಯಮಂತ್ರಿಗಳ ಬಳಿ ನನ್ನ ಅಭಿಪ್ರಾಯ ಸಲ್ಲಿಸಿದ್ದೇನೆ. ಅವರ ತೀರ್ಮಾನಕ್ಕೆ ನಾನು ಬದ್ಧ ಎಂದರು.
ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ನಾನು ಮಾಡಿರುವ ಆರೋಪ ನಿಜ. ಕೋಡಿಹಳ್ಳಿ ಚಂದ್ರಶೇಖರ್ ಸಂಘಟನೆಯ ಹೆಸರಿನಲ್ಲಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಹಾಗಾಗಿ ಯಾರೂ ಇವರನ್ನು ನಂಬಿ ಮೋಸ ಹೋಗಬೇಡಿ. ನೇರವಾಗಿ ಸರ್ಕಾರದ ಜೊತೆಗೆ ಬಂದು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು.