ಶಿವಮೊಗ್ಗ: ಇದೇ 21 ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಯಾವುದೇ ಅಡಚಣೆಯಿಲ್ಲದಂತೆ ಸುಸೂತ್ರವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.
ಜಿಲ್ಲಾಡಳಿತ ಸಭಾಂಗಣದಲ್ಲಿ ಪೂರಕ ಪರೀಕ್ಷೆ ಆಯೋಜನೆ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯಲ್ಲಿ 5225 ವಿದ್ಯಾರ್ಥಿಗಳು ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳನ್ನು ಮೀಸಲಿರಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳನ್ನು ಹೊಸ ಅಭ್ಯರ್ಥಿಗಳಾಗಿ ಪರಿಗಣಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕ್ರಮ ಕೈಗೊಳ್ಳುವುದರ ಜತೆಗೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪೂರಕ ಪರೀಕ್ಷೆ ಸಂದರ್ಭದಲ್ಲಿಯೂ ಕೈಗೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರಸ್ತುತ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಪೂರ್ವದಲ್ಲಿ ಸ್ಯಾನಿಟೈಸರ್, ದೇಹದ ಉಷ್ಣತೆ ಪರೀಕ್ಷೆ ಕೈಗೊಳ್ಳಬೇಕು. ವಿದ್ಯಾಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತ್ರಿಪಡಿಸಬೇಕು. ವಿದ್ಯಾರ್ಥಿಗಳು ಗುಂಪುಗೂಡಲು ಅವಕಾಶ ನೀಡಬಾರದು ಎಂದು ಅವರು ತಿಳಿಸಿದರು.
ಕೊರೊನಾ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇದಕ್ಕಾಗಿ ಸೂಕ್ತ ಸೆಂಟರ್‍ಗಳನ್ನು ಗುರುತಿಸಿ ಎಲ್ಲಾ ವ್ಯವಸ್ಥೆ ಕಲ್ಪಿಸಬೇಕು. ಮಾಸ್ಕ್ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಲಭ್ಯವಿರಬೇಕು. ಪರೀಕ್ಷೆ ಆರಂಭಕ್ಕೆ ಮೊದಲ ದಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸ್ಯಾನಿಟೈಸೇಶನ್ ಮಾಡಬೇಕು. ಶೇ.100ರಷ್ಟು ಸುರಕ್ಷಿತವಾಗಿ ಪರೀಕ್ಷೆಯನ್ನು ನಡೆಸಲು ಕ್ರಮಗಳನ್ನು ಕೈಗೊಂಡು ಯಾವುದೇ ಬೇಜವಾಬ್ದಾರಿಗೆ ಆಸ್ಪದ ನೀಡಬಾರದು ಎಂದು ಅವರು ಎಚ್ಚರಿಕೆ ನೀಡಿದರು.