ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ನಿಂದ ಇಂದು ಪ್ರತಿಭಟನೆ ನಡೆಯಿತು. ಪೆಟ್ರೋಲ್, ಡೀಸೆಲ್, ರಸಗೊಬ್ಬರ ದರ ಏರಿಕೆ ಖಂಡಿಸಿ ಜೆಡಿಎಸ್ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜನಸಾಮಾನ್ಯರಿಗೆ ಅಚ್ಛೇದಿನ್ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೀವನದ ಮೇಲೆ ಬರೆ ಎಳೆಯುತ್ತಿದೆ. ತೈಲ ಬೆಲೆ ಏರಿಕೆ ಆಗುತ್ತಿದ್ದು, ನೂರರ ಗಡಿ ದಾಟಿದೆ. ಜೊತೆಗೆ ಗ್ಯಾಸ್, ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ರಸಗೊಬ್ಬರದ ಬೆಲೆ ಇಳಿಸುವ ಮೂಲಕ ಜನಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.