ಶಿವಮೊಗ್ಗ: ಜಿಲ್ಲಾದ್ಯಂತ ಭತ್ತ ಕಟಾವು ಮತ್ತು ಒಕ್ಕಣೆ ನಡೆಯುತ್ತಿದ್ದು, ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಸುಮಾರು 1.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಆದರೆ, ಬೆಳೆದ ಬೆಳೆಯನ್ನು ಮಾರಲು ಖರೀದಿ ಕೇಂದ್ರ ತೆರೆಯದೆ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರದ ಈ ನಿರ್ಧಾರದಿಂದಾಗಿ ಭತ್ತದ ಬೆಳೆಗೆ ಸರಿಯಾದ ಮಾರುಕಟ್ಟೆ ದರ ಸಿಗದೆ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿದೆ. ಖರೀದಿ ಕೇಂದ್ರಗಳು ತೆರೆಯದ ಕಾರಣ ಭತ್ತದ ಬೆಲೆ ಪಾತಾಳಕ್ಕೆ ಕುಸಿದಿದೆ. ಕೂಡಲೇ ಭತ್ತದ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.