ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಐದು ಕಂಟೇನ್ಮೆಂಟ್ ವಲಯಗಳನ್ನ ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿರುವ ಯಾರೂ ಮನೆಯಿಂದ ಹೊರ ಬಾರದಂತೆ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದರು. ಪಾಸಿಟಿವ್ ಪ್ರಕರಣಗಳು ಕಂಡು ಬಂದಿರುವ ಕಂಟೇನ್ಮೆಂಟ್ ಪ್ರದೇಶದಿಂದ ಮೆಡಿಕಲ್ ಎಮರ್ಜೆನ್ಸಿ ಪ್ರಕರಣಗಳನ್ನ ಮಾತ್ರ ಹೊರಗೆ ಬಿಡಬೇಕು. ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ತಕ್ಷಣ ಅದನ್ನ ಕಂಟೇನ್ಮೆಂಟ್ ಪ್ರದೇಶ ಎಂದು ಗುರುತಿಸಿ, ಬಂದೋಬಸ್ತ್ ಏರ್ಪಡಿಸಬೇಕು. ಕಂಟೇನ್ಮೆಂಟ್ ಪ್ರದೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು, ಇಬ್ಬರು ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾವುದೇ ಸರ್ಕಾರಿ ಅಧಿಕಾರಿಗಳು ಅಡ್ಡಾಡಬಾರದು.
ಅದೇ ರೀತಿ ಕ್ವಾರಂಟೈನ್ ಕೇಂದ್ರಗಳ ಒಳಗೆ ನಿಗದಿಪಡಿಸಿರುವ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿಲ್ಲ. ಕಂಟೇನ್ಮೆಂಟ್ ಪ್ರದೇಶದಲ್ಲಿ ಪ್ರತಿದಿನ ಆರೋಗ್ಯ ಸಮೀಕ್ಷೆ ನಡೆಸಬೇಕು. ರೋಗ ಲಕ್ಷಣಗಳು ಕಂಡು ಬಂದವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನ ಗುರುತಿಸಲು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ತಂಡವನ್ನು ರಚಿಸಲಾಗಿದ್ದು, ಈ ತಂಡಕ್ಕೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಸಮರ್ಪಕ ಮಾಹಿತಿಯನ್ನ ಆಗಿಂದಾಗ್ಗೆ ಒದಗಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನ ಗುರುತಿಸಿದ ತಕ್ಷಣ ತಾಲೂಕು ಮಟ್ಟದಲ್ಲಿ ಅವರ ಗಂಟಲು ದ್ರವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಬೇಕು. 14 ದಿನ ಕ್ವಾರಂಟೈನ್ ಪೂರ್ಣಗೊಳಿಸಿರುವವರನ್ನ ಹೋಂ ಕ್ವಾರಂಟೈನ್‍ಗೆ ಕಳುಹಿಸಬೇಕು ಎಂದರು.
ಸೋಂಕು ನಾಶಕ ಸಿಂಪಡಣೆ: ಜನರು ಹೆಚ್ಚು ಸೇರುವ ಸ್ಥಳಗಳನ್ನ ಈಗಾಗಲೇ ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದ್ದು, ಅಂತಹ ಕಡೆಗಳಲ್ಲಿ ಪ್ರತಿದಿನ ರಾತ್ರಿ ಕಡ್ಡಾಯವಾಗಿ ಸೋಂಕು ನಾಶಕ ಸಿಂಪಡಣೆ ಮಾಡಬೇಕು ಎಂದರು.
781 ಸ್ಯಾಂಪಲ್ ಫಲಿತಾಂಶ: ನಿನ್ನೆ ಒಂದೇ ದಿನ ಶಿಮ್ಸ್ ಪ್ರಯೋಗಾಲಯದಲ್ಲಿ 781 ಗಂಟಲು ದ್ರವದ ಸ್ಯಾಂಪಲ್ ಫಲಿತಾಂಶ ಬಂದಿದ್ದು, ಪ್ರಯೋಗಾಲಯದ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.