ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಳಕೆಯಾದ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ಸರಿಯಾದ ಕ್ರಮದಲ್ಲಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಹಲವು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದ್ರೂ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ. ಕಳೆದ 15 ದಿನಗಳಲ್ಲಿ 575 ಕೆ.ಜಿ. ಪ್ಲಾಸ್ಟಿಕ್ ಜಪ್ತಿ ಮಾಡಲಾಗಿದ್ದು, ಅದರೊಂದಿಗೆ ದಂಡವನ್ನು ವಿಧಿಸಬೇಕು ಎಂದರು. ನಾಳೆಯಿಂದಲೇ ತ್ಯಾಜ್ಯ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕ್ರಮ ತೆಗೆದುಕೊಳ್ಳಲು ಹಿಂಜರಿಯುವ, ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ಲಾಸ್ಟಿಕ್ ಮಾರಾಟ ಮಾಡುವವರು ಹಾಗೂ ಪಡೆಯುವರ ಮೇಲೆಯೂ ದಂಡ ವಿಧಿಸಲಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಕಲ್ಯಾಣ ಮಂಟಪಗಳು, ಹೋಟೆಲ್‌ಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಅಲ್ಲದೇ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾರ್ವಜನಿಕರು ಸಹ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.