ಶಿವಮೊಗ್ಗ: ಊರಿನಲ್ಲಿರುವ ಮದ್ಯದಂಗಡಿ ತೆರವು ಮಾಡದ ಹೊರತು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ತೀರ್ಮಾನಿಸಿ ಬೆಳ್ಳಿಕೊಪ್ಪ ಗ್ರಾಮಸ್ಥರು ಸಾಗರದ ಉಪವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸಾಗರ ತಾಲೂಕಿನ ಬೆಳ್ಳಿಕೊಪ್ಪದಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಎಂಎಸ್ಐಎಲ್ ಮದ್ಯದ ಅಂಗಡಿ ತೆರೆಯಲಾಗಿದೆ. ಮದ್ಯದಂಗಡಿ ತೆರೆಯುವ ಮುನ್ನಾ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ, ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದರು. ಅಂದು ಸ್ಥಳಕ್ಕಾಗಮಿಸಿದ ಎಸಿ, ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ ನಂತರ ಚುನಾವಣೆಯಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದರು. ಆದರೆ, ಇದೀಗ ಚುನಾವಣೆ ಮುಗಿದ ನಂತರ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ.
ಇನ್ನು ಮದ್ಯದಂಗಡಿ ತೆರೆಯಲು ಅನುಮತಿ ನೀಡಿದ್ದರಿಂದ ಊರಿನಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಜೊತೆಗೆ ಸುತ್ತಮುತ್ತಲಿನ ಕೂಲಿ ಕೆಲಸಗಾರರು ಕುಡಿದು ಹಾಳಾಗುತ್ತಿದ್ದಾರೆ. ಹಾಗಾಗಿ ನಮ್ಮೂರಿನ ಮದ್ಯದಂಗಡಿ ತೆರವು ಮಾಡುವ ತನಕ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಉಪವಿಭಾಗಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದಾರೆ.