ತುಮಕೂರು: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಬೇಳೂರು ಬಾಯರ್ ಬಯೋಟೆಕ್ ಲಿಮಿಟೆಡ್ ಕೈಗಾರಿಕೆ ಬಳಿ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿರುವುದು ದುರದೃಷ್ಟಕರ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಧ್ಯಮ ಪ್ರತಿನಿಧಿಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕೈದು ಮಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಸಿಸಿಟಿವಿ ವಿಡಿಯೋ ಆದರಿಸಿ ವಶಕ್ಕೆ ತೆಗೆದುಕೊಳ್ಳಲಿದ್ದಾರೆ. ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದೇನೆ. ಸುಮಾರು 60ರಿಂದ 70 ಜನರು ಹಲ್ಲೆ ನಡೆಸಿದ್ದಾರೆ. ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇದು ಆಗಬಾರದಿತ್ತು ಎಂದರು.
ಬೇಳೂರು ಬಾಯರ್ ಬಯೋಟೆಕ್ ಲಿಮಿಟೆಡ್ನಲ್ಲಿ ಬಾಯ್ಲರ್ ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಅದನ್ನು ಸ್ಥಳಾಂತರಿಸಬೇಕೋ ಅಥವಾ ಅದನ್ನು ಮುಚ್ಚಿಸಬೇಕೋ ಎಂಬ ಕುರಿತಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ. ಇದೇ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾಕ್ಟರ್ ವೀರಭದ್ರಪ್ಪ ಹಾಜರಿದ್ದರು.