ತುಮಕೂರು: ಶುದ್ಧ ಕುಡಿಯುವ ನೀರಿನ ಬಳಕೆ, ಅರಣ್ಯ ಸಂರಕ್ಷಣೆ ಹಾಗೂ ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಕರಿಯಮ್ಮನಪಾಳ್ಯದಲ್ಲಿ ಜನರಿಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಸರ್ಕಾರದ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಅದನ್ನು ಅರಿತು ನಾವು ಮತ್ತು ನಮ್ಮ ಕುಟುಂಬದವರು ಸೇರಿ ಮನೆ, ಶಾಲೆ, ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ಜೊತೆಗೆ ನೀರಿನ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಪ್ರತಿಯೊಬ್ಬರು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಬೇಕು ಎಂದರು.