ತುಮಕೂರು: ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇರಳದ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸ್ಟಾಫ್ಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದೆ. ವಿವಿಧ ದೇಶಗಳಲ್ಲಿ ಕಂಡುಬಂದಿರುವ ಹೊಸ ರೂಪಾಂತರಿ ತಳಿಯ ಬಗ್ಗೆ ಪ್ರಧಾನಿ, ಕೇಂದ್ರ ಆರೋಗ್ಯ ಸಚಿವರ ಸೂಚನೆ ಮೇರೆಗೆ ರಾಜ್ಯದಲ್ಲಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಶಾಲಾ ಕಾಲೇಜುಗಳ ಮೇಲೂ ನಿಗಾ ವಹಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಇರುವ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಬಗ್ಗೆ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದ್ರು.
ಬೆಳೆ ಹಾನಿ ಪರಿಹಾರ ವಿತರಣೆ ಶುರು
ಅಕಾಲಿಕ ಮಳೆಗೆ ರಾಜ್ಯದೆಲ್ಲೆಡೆ ಬೆಳೆ ಹಾನಿ ಉಂಟಾದ ಪರಿಣಾಮ ನಷ್ಟಕ್ಕೀಡಾದ ರೈತರಿಗೆ ಪರಿಹಾರವನ್ನು ವಿತರಣೆ ಮಾಡಲಾಗುತ್ತಿದೆ. ಜಿಲ್ಲಾಡಳಿತದ ಬಳಿ ಈಗಾಗಲೇ ಬೆಳೆ ಹಾನಿ ಪರಿಹಾರಕ್ಕೆಂದೇ 685 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಉಂಟಾದ ಹಾನಿಗೆ ಅನುಗುಣವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಹೊಸ ಕೋವಿಡ್ ರೂಪಾಂತರದ ಬಗ್ಗೆ ನಿಮಗೆಷ್ಟು ಗೊತ್ತು.. ಏನಿದು ಒಮಿಕ್ರೋನ್?
ಬೆಳೆ ಹಾನಿ ಪರಿಹಾರ ಹೆಚ್ಚಿನ ಪ್ರಮಾಣದಲ್ಲಿ ಅಗತ್ಯವಿದ್ದಲ್ಲಿ ಹಣಕಾಸು ಇಲಾಖೆಗೆ ಮನವಿ ಮಾಡಿದಲ್ಲಿ ಇನ್ನಷ್ಟು ಪರಿಹಾರ ಮೊತ್ತವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಭರವಸೆ ನೀಡಿದರು.