ತುಮಕೂರು: ಕೊರೊನಾ ವೈರಸ್ 2ನೇ ಅಲೆ ಹರಡುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ವಸೂಲಾತಿ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ 2ನೇ ಅಲೆ ಹರಡುತ್ತಿದ್ದು, ವಾರ್ಡ್ ಸದಸ್ಯರು ಹಾಗೂ ಮಾಜಿ ವಾರ್ಡ್ ಸದಸ್ಯರ ಸಹಕಾರ ಪಡೆದು ಜಿಲ್ಲೆಯಲ್ಲಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮಾಡಿ, 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯಲು ವ್ಯವಸ್ಥೆ ಮಾಡಬೇಕು. ಜೊತೆಗೆ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿ ಹೇಳಬೇಕು ಎಂದರು.
ಕೊರೊನಾ ನಿಯಂತ್ರಣ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಗೆ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು. ಅಲ್ಲದೇ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.