ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಅಸ್ತ್ರವಾಗಿದೆ. ಶಿರಾ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯದಲ್ಲಿ ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಲಿದೆ ಎಂಬುದನ್ನು ಸಾಬೀತುಪಡಿಸುವ ಅವಕಾಶ ಈಗ ಬಂದಿದೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದ್ದು, ಟಿ.ಬಿ. ಜಯಚಂದ್ರ ಅವರು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಜಯಚಂದ್ರ ಸ್ಪರ್ಧಿಸಿ ಸೋಲು ಕಂಡಿದ್ದರು, ಆದರೆ ಈ ಬಾರಿ ಜಯಚಂದ್ರ ಅವರ ಗೆಲುವು ನಿಶ್ಚಿತವಾಗಿದೆ ಎಂದು ತಿಳಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡಲು, ಜನರ ಹಿತವನ್ನು ಕಾಪಾಡುವಲ್ಲಿ ವಿಫಲವಾಗಿದೆ. ಕೊರೊನಾ ಸಮಯದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ವೆಂಟಿಲೇಟರ್, ಫೇಸ್ ಮಾಸ್ಕ್, ಸ್ಯಾನಿಟೈಸರ್ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆಸಿದೆ. ಈ ಹಗರಣವನ್ನು ಮುಂದಿಟ್ಟುಕೊಂಡು ಉಪ ಚುನಾವಣೆ ಎದುರಿಸಲಾಗುವುದು ಎಂದು ಡಾ. ಜಿ ಪರಮೇಶ್ವರ್ ತಿಳಿಸಿದರು.
ಮಾಜಿ ಸಚಿವ ಹಾಗೂ ಶಿರಾ ಕ್ಷೇತ್ರದ ಅಭ್ಯರ್ಥಿ ಟಿ.ಬಿ. ಜಯಚಂದ್ರ ಮಾತನಾಡಿ, ಶಿರಾ ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಹಿಂದೆ ಸ್ಪರ್ಧಿಸಿ ಸೋತಿದ್ದೆ. ಎರಡು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ನಾನು ಸೋತ ಬಳಿಕ ಆಕಸ್ಮಿಕವಾಗಿ ಚುನಾವಣೆ ಎದುರಾಗಿದ್ದು, ಈ ಚುನಾವಣೆ ರಾಜ್ಯಕ್ಕೆ ದಿಕ್ಸೂಚಿಯಾಗಲಿದೆ ಎಂದರು.