ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿ ಮಾರ್ಪಾಡು ಮಾಡುವ ಹಿನ್ನೆಲೆ ಈಗ ಇರುವ ಬಸ್ ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ಕೆಎಸ್ಆರ್ಟಿಸಿ ತುಮಕೂರು ಘಟಕ 1ಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಜ್ಯೋತಿಗಣೇಶ್ ಮನವಿ ಮಾಡಿಕೊಂಡರು.
ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಶೋಕ್ ರಸ್ತೆಯಲ್ಲಿರುವ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಭಾಗದಲ್ಲಿ ನೂತನ, ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸಲು ಸುಮಾರು 82 ಕೋಟಿ ರೂ.ಗಳ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಸುಮಾರು 2 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಅದಕ್ಕೆ ಪರ್ಯಾಯವಾಗಿ ಕೆಎಸ್ಆರ್ಟಿಸಿ ನಿಗಮದ ತುಮಕೂರು ಘಟಕ-1ಕ್ಕೆ ಸ್ಥಳಾಂತರಗೊಳಿಸಲಾಗಿದೆ ಎಂದರು.
ಇನ್ನು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು, ವಿಶಾಲವಾಗಿರುವ ಈ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.
ಈ ವೇಳೆ ಮಹಾನಗರ ಪಾಲಿಕೆಯ ಮೇಯರ್ ಲಲಿತ ರವೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮುಂತಾದವರು ಹಾಜರಿದ್ದರು.