ತುಮಕೂರು: ಮಾನವ ಹಕ್ಕುಗಳ ಕಾನೂನು ಮತ್ತು ಮೂಲಭೂತ ಹಕ್ಕುಗಳ ಕುರಿತು ಅರಿವು ಮೂಡಿಸುವ ಅವಶ್ಯಕತೆಯಿದೆ. ಕಾನೂನಿಗೆ ನಾವೆಲ್ಲರೂ ಬದ್ಧರಾಗಿರಬೇಕು. ಅಲ್ಲದೆ, ಅವುಗಳನ್ನು ರಕ್ಷಿಸಲು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ, ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ತುಮಕೂರು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಅರಿವು ಹಾಗೂ ಸಂರಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾನೂನಿನ ಚೌಕಟ್ಟಿನಲ್ಲಿ ಒಳ್ಳೆಯ ಚಿಂತನೆಗಳಿಂದ ಜೀವನ ಸಾಗಿಸಬೇಕು. ಒಳ್ಳೆಯತನಕ್ಕಾಗಿ ಬೇರೆಯವರ ಹಕ್ಕುಗಳನ್ನು ಚ್ಯುತಿಗೊಳಿಸುತ್ತಿದ್ದೇವೆ. ಈ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದರು.
ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ಮಾತನಾಡಿ, ಸಾರ್ವಜನಿಕ ಸೇವೆಯಲ್ಲಿರುವವರು ಜನರ ಹಿತಕ್ಕಾಗಿ ಕೆಲಸ ಮಾಡುವ ಮನೋಭಾವ ಹೆಚ್ಚಿಸಿಕೊಳ್ಳಬೇಕು. ಮಾನವ ಹಕ್ಕು ಉಲ್ಲಂಘನೆಯಾದರೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಬಹುದು. ದೂರು ಸಲ್ಲಿಸಲು ಯಾವುದೇ ನಮೂನೆಗಳಿರುವುದಿಲ್ಲ ಎಂದು ಹೇಳಿದರು.