ತುಮಕೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ನಡೆಸುತ್ತಿರುವ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ ಇಂದು 'ಹಿಂದಿ ದಿವಸ್’ ಎಂಬ ಕಾರ್ಯಕ್ರಮವನ್ನು ಆಚರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಬಲವಂತವಾಗಿ ರಾಜ್ಯಗಳ ಮೇಲೆ ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಒತ್ತಾಯ ಹೇರುತ್ತಿದೆ. ಕೇಂದ್ರ ಸರ್ಕಾರದ ಈ ಧೋರಣೆ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಕೆ. ಎನ್. ಮಂಜುನಾಥ್ ಗೌಡ ಹೇಳಿದರು.
ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಮನವಿಗೆ ಸ್ಪಂದಿಸಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಅದಕ್ಕೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ ಎಂದರು.