ತುಮಕೂರು : ಪ್ರತಿವರ್ಷ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿರ್ಧಾರವನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದರಂತೆ ಪ್ರತಿ ತಾಲೂಕಿಗೆ ಒಂದರಂತೆ ಪ್ರತಿವರ್ಷ ಮಂಜೂರು ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ ಇಂಗ್ಲಿಷ್ ಶಿಕ್ಷಕರ ಸಂಖ್ಯೆಯನ್ನು ಗಮನಿಸಬೇಕಾಗುತ್ತದೆ. ಹೀಗಾಗಿ ಇಂಗ್ಲಿಷ್ ಶಿಕ್ಷಕರ ಸಂಖ್ಯೆಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಹೇಳಿದರು.
ಈ ಬಾರಿ ಹೆಚ್ಚುವರಿ ಕನ್ನಡ ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸ್ವಲ್ಪ ತಡವಾಗಲಿದೆ. ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚುವರಿ ಶಾಲೆಗಳನ್ನು ತೆರೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.