ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಶೋಷಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಸರ್ಕಾರದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ರಾಜ್ಯದಲ್ಲಿನ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯ ಜನಗಣತಿ ವರದಿಯನ್ನು ರಾಜ್ಯ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಬೇಕು. ರಾಜ್ಯದಲ್ಲಿನ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಪತ್ರವನ್ನು ನೀಡಬೇಕು. ಇಲ್ಲವಾದರೆ ತಮಿಳುನಾಡು ಸರ್ಕಾರದಂತೆ ಶೇ. 75ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ರಾಜ್ಯ ಪರಿಶಿಷ್ಟ ಜಾತಿ ಪಂಗಡಗಳ ಉಪಯೋಜನಾ ಕಾಯ್ದೆಯ ಕಾಲಂ 7(ಡಿ)ಯನ್ನು ಕೈಬಿಡುವ ತಿದ್ದುಪಡಿ ಮಸೂದೆ ಮಂಡಿಸಬೇಕು.
ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮತ್ತು ವಿಧಾನಮಂಡಲದಲ್ಲಿ ಚರ್ಚೆಗೊಳಪಡಿಸಬೇಕು ಮತ್ತು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಬೇಕು. ಪದವೀಧರ ಮತ್ತು ವಿದ್ಯಾವಂತ ನಿರುದ್ಯೋಗಿ ಯುವಕ- ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ನೀಡಬೇಕು. ಇಲ್ಲವೇ ನಿರುದ್ಯೋಗ ಭತ್ಯೆ ನೀಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.