ಕೋಲಾರ/ ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಮತ್ತು ಎಡ ಪಕ್ಷಗಳು ಭಾರತ್ ಬಂದ್ಗೆ ಕರೆ ನೀಡಿದ ಹಿನ್ನೆಲೆ ಇಂದು ಕೋಲಾರ ಮತ್ತು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೋಲಾರದಲ್ಲಿ ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದವು. ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಖಾಲಿ ಮಡಿಕೆಗಳನ್ನ ತಲೆ ಮೇಲೆ ಹೊತ್ತು ಗೋವಿಂದಾ.. ಗೋವಿಂದಾ.. ಎಂದು ಪ್ರದಕ್ಷಿಣೆ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ರು.
ಈ ವೇಳೆ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಯಾಗಬೇಕೆಂದು ಒತ್ತಾಯಿಸಿದ್ರು. ಪ್ರತಿಭಟನೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ಗಾಗಿ ಒಂದು ಕೆಎಸ್ಆರ್ಪಿ, ಡಿಆರ್ ತುಕ್ಕಡಿ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ತುಮಕೂರಿನಲ್ಲೂ ಸಹ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಟೌನ್ ಹಾಲ್ ವೃತ್ತದಿಂದ ಬಿಎಸ್ಎನ್ಎಲ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಎಐಟಿಯುಸಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಕಾರ್ಮಿಕರ ಪರವಾಗಿರದೇ, ಕೇವಲ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಲ್ಲಿ ವಿಫಲವಾಗಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ರೈತರ ಬೆಳೆಗೆ ಸೂಕ್ತ ಪರಿಹಾರ ಸಿಗದೆ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು.
ಸರ್ಕಾರ ತಕ್ಷಣವೇ ಸ್ವಾಮಿನಾಥನ್ ವರದಿ ಜಾರಿಗೆ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕನಿಷ್ಠ 10,000 ಪಿಂಚಣಿ ಜಾರಿ ಮಾಡಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಬಾರದು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.