ತುಮಕೂರು: ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ, ಮಾರ್ಚ್ 9ರಂದು ಧರಣಿ ನಡೆಸಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ 380 ರೂಗಳ ಬೆಂಬಲ ಬೆಲೆ ಘೋಷಿಸಿರುವುದು ರೈತರ ಮೂಗಿಗೆ ತುಪ್ಪ ಸವರಿದಂತೆ ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಒಂದು ಕ್ವಿಂಟಾಲ್ ಕೊಬ್ಬರಿ ಉತ್ಪಾದನೆಗೆ 20,200 ವೆಚ್ಚ ತಗುಲಲಿದೆ. ಸರ್ಕಾರ ಘೋಷಣೆ ಮಾಡಿರುವುದು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಿದ್ದು, ತೆಂಗು ಬೆಳೆಯನ್ನು ನಂಬಿ ಬದುಕುತ್ತಿರುವ ರೈತರಿಗೆ ಅನ್ಯಾಯವಾಗಲಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಜಿಲ್ಲೆಯ ಬಹುತೇಕ ರೈತರು ತೆಂಗು ಬೆಳೆಯನ್ನು ಅವಲಂಬಿಸಿದ್ದು, ಕೇಂದ್ರ ಸರ್ಕಾರ ಕನಿಷ್ಠ 20,000ರೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಸ್ವಾಮಿನಾಥನ್ ವರದಿ ಪ್ರಕಾರ ವೈಜ್ಞಾನಿಕವಾಗಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಉತ್ಪಾದನಾ ವೆಚ್ಚಕ್ಕೆ ಸೇರಿ ಅರ್ಧದಷ್ಟು ಹಣವನ್ನು ಬೆಂಬಲ ಬೆಲೆಯನ್ನಾಗಿ ನೀಡಬೇಕು. ರೈತರ ಶ್ರಮಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಬೇಕು ರೈತರು ಹಾಕಿರುವ ಬಂಡವಾಳಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
2018ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಂಡು ತೆಂಗು ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ತೆಂಗಿಗೆ ಬೆಂಬಲ ಬೆಲೆ ಘೋಷಣೆ ಮತ್ತು ನೀರಾವನ್ನು ಸಹಕಾರಿ ತತ್ವದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದ್ದರು. ಅದನ್ನು ಈಗ ರಾಜ್ಯದ ಸಂಸದರು ಅಮಿತ್ ಶಾ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಈ ಅಂಶಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು.
ಕೊರೊನಾ ನಿಯಂತ್ರಣಕ್ಕೆ ಸಕಲ ಸಿದ್ಧತೆ, ಸೊಗೂಡು ಶಿವಣ್ಣ:
ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ಬೇಕಾದಂತಹ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಅದೇ ರೀತಿಯಲ್ಲಿ ನಗರದಲ್ಲಿನ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹೊರದೇಶಗಳಿಂದ 60ಕ್ಕೂ ಹೆಚ್ಚು ಮಂದಿ ಬಂದಿದ್ದಾರೆ. ಅವರಿಗೆ ಕೊರೊನಾ ಬಂದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದ್ದು, ಹೊರಜಿಲ್ಲೆಗಳಿಂದ ಬರುವವರ ಬಗ್ಗೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಮನವಿ ಮಾಡಿಕೊಂಡರು.
ಮಹಾನಗರ ಪಾಲಿಕೆಯ ಆವರಣವನ್ನು ಸ್ವಚ್ಛಗೊಳಿಸಲು ಕಾರ್ಮಿಕರು ಸರಿಯಾಗಿ ಬರುತ್ತಿಲ್ಲ, ಪಾಲಿಕೆಯಲ್ಲಿ ಅಧಿಕಾರ ಕೇಂದ್ರೀಕರಣಗೊಂಡಿದೆ. ಪೌರಕಾರ್ಮಿಕರಿಗೆ ಸರ್ಕಾರದಿಂದ ನೀಡುವ ಅಗತ್ಯ ಸೌಲಭ್ಯಗಳನ್ನು ಮಹಾನಗರ ಪಾಲಿಕೆ ನೀಡದೇ ಅವ್ಯವಹರದಲ್ಲಿ ಮುಳುಗಿದೆ ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.