ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಸ್ಥಳಗಳನ್ನು ಸರ್ವೇ ಮಾಡಿಸಿ ಒತ್ತುವರಿ ಜಾಗವನ್ನು ನಿರ್ದಾಕ್ಷಿಣ್ಯವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳುವ ಕಾರ್ಯ ಮಾಡಲಾಗುತ್ತಿದೆ ಎಂದು ಮೇಯರ್ ಫರೀದಾ ಬೇಗಂ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಂದ ಸರ್ವೇ ಕಾರ್ಯ ನಡೆಯುತ್ತಿದೆ. ಒತ್ತುವರಿಯಾಗಿರುವ ಜಾಗದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೊದಲಿಗೆ ಮರಳೂರು ದಿಣ್ಣೆಯಿಂದ ಸರ್ವೇ ಕಾರ್ಯ ನಡೆಯುತ್ತಿದೆ. ಇಲ್ಲಿರುವ ನಿವಾಸಿಗಳು ಸರಿಯಾದ ಭೂ ದಾಖಲಾತಿ ನೀಡದಿದ್ದರೆ ಒತ್ತುವರಿಯಾಗಿರುವ ಪ್ರದೇಶವನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳಲಾಗುವುದು ಎಂದರು.
2019-20 ನೇ ಸಾಲಿನಲ್ಲಿ ತುಮಕೂರು ಮಹಾನಗರ ಪಾಲಿಕೆಗೆ ಸ್ವಚ್ಛತೆ ಸಂಬಂಧಿಸಿದಂತೆ ಎರಡನೇ ಸ್ಥಾನ ದೊರೆತಿತ್ತು. ಈ ಬಾರಿಯೂ ಅದನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯ ಆಗಬೇಕಿದೆ. ಪಾಲಿಕೆಯ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು. ಈ ಹಿನ್ನೆಲೆಯಲ್ಲಿ ಆ್ಯಪ್ ಬಿಡುಗಡೆಗೊಳಿಸಿದ್ದು, ಇದರಲ್ಲಿ ತುಮಕೂರಿನ ಸ್ವಚ್ಛತೆಯ ಬಗ್ಗೆ ದೂರು, ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದರು.
ಪಾಲಿಕೆ ವತಿಯಿಂದ ಮಹಾನಗರ ಪಾಲಿಕಾ ಕ್ರೀಡಾಕೂಟ ಆಯೋಜಿಸಲಾಗಿದೆ. ಇದೇ ತಿಂಗಳ 12 ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ತುಮಕೂರು ಮೇಯರ್ ಕಪ್- 2020 ಎಂಬ ಹೆಸರಿನಲ್ಲಿ ವಿಜೇತ ತಂಡಕ್ಕೆ ಬಹುಮಾನ ನೀಡಲಾಗುವುದು. ಈ ಕ್ರೀಡೆಯಲ್ಲಿ ಪಾಲಿಕೆಯ ನೌಕರರನ್ನು ಒಳಗೊಂಡಂತೆ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪಾಲಿಕೆ ಅಧಿಕಾರಿಗಳು, ಸದಸ್ಯರು ಹಾಗೂ ಪೌರಕಾರ್ಮಿಕರು, ಸಿಬ್ಬಂದಿ ವರ್ಗ ಪಾಲ್ಗೊಳ್ಳುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ಈ ಕ್ರೀಡೆ ಆಯೋಜಿಸಲಾಗಿದೆ ಎಂದು ಹೇಳಿದರು.